ಇಂದಿನಿಂದ ಜೂನ್ 17ರವರೆಗೆ ಭಾರಿ ಮಳೆಯ ಮುನ್ಸೂಚನೆ ನೀಡಿದ ಹಮಾನ ಇಲಾಖೆ

ಇಂದಿನಿಂದ ಜೂನ್ 17ರವರೆಗೆ ಭಾರಿ ಮಳೆಯ ಮುನ್ಸೂಚನೆ ನೀಡಿದ ಹಮಾನ ಇಲಾಖೆ
ಶ್ರೀನಿವಾಸ ಪಟ್ಟಣ
ಬೆಂಗಳೂರು: ಇಂದಿನಿಂದ ಮಲೆನಾಡು, ಕರಾವಳಿಯಲ್ಲಿ ಅರುಣ ಆರ್ಭಡಿಸುವ ಸಾದ್ಯತೆಗಳಿವೆ, ಇಂದಿನಿಂದ ಜೂನ್ 17ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಹಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಕರ್ನಾಟಕದ ಉಡುಪಿ, ಒಡಿಶಾ, ಕೇರಳದ ಕೊಜಿಕೊಡೆ, ವಯನಾಡಿನಲ್ಲಿ ಇಂದಿನಿಂದ ಜೂನ್ 15ರವರೆಗೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಕರಾವಳಿ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಕೇರಳದಲ್ಲಿ ಇನ್ನೂ 3 ದಿನ ಅಧಿಕ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸೋಮವಾರ ರೆಡ್ ಅಲರ್ಟ್ ಕೂಡ ನೀಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 16 ಹಾಗೂ 17ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿರುವದಾಗಿ ಮುನ್ಸೂಚನೆ ನೀಡಲಾಗಿದೆ.
ಉತ್ತರ ಒಳನಾಡಿನಲ್ಲಿ ಸೋಮವಾರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಹೀಗಾಗಿ, ಉತ್ತರ ಒಳನಾಡಿನಲ್ಲಿ ಜೂನ್ 14ರಿಂದ 2 ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಈಗಾಗಲೇ ಜಲಾಶಯಗಳಿಗೆ ಭಾರೀ ನೀರು ಹರಿದುಬರುತ್ತಿದ್ದು, ನದಿಗಳು ತುಂಬಿಹರಿಯುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಆಗಿರುವುದರಿಂದ ಮುಂದಿನ 1 ವಾರಗಳ ಕಾಲ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.