ಕರ್ನಾಟಕ

ರಾಜ್ಯೋತ್ಸವಕ್ಕೆ ಮಾರ್ಗಸೂಚಿ ಪ್ರಕಾರ ಅನುಮತಿ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಪೂರ್ವಭಾವಿ ಸಭೆ: ಕರಾಳ ದಿನಾಚರಣೆಗೆ ಅವಕಾಶ ಇಲ್ಲ

ರಾಜ್ಯೋತ್ಸವಕ್ಕೆ ಮಾರ್ಗಸೂಚಿ ಪ್ರಕಾರ ಅನುಮತಿ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡುವುದಿಲ್ಲ. ಅದೇ ರೀತಿ ಸರಕಾರದ ಮಾರ್ಗಸೂಚಿ ಹಾಗೂ ಕಾನೂನು ಚೌಕಟ್ಟಿನಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರಾಳ ದಿನ ಆಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ. ರಾಜ್ಯೋತ್ಸವ ಮೆರವಣಿಗೆಗೆ ಸರಕಾರದ ಕೋವಿಡ್ ಮಾರ್ಗಸೂಚಿ ಆಧರಿಸಿ ಅನುಮತಿ ನೀಡಲಾಗುವುದು. ಎಲ್ಲರೂ ಸೇರಿ ಶಾಂತಿಯುತ ಹಾಗೂ ಸಂಭ್ರಮದಿಂದ ರಾಜ್ಯೋತ್ಸವ ಆಚರಿಸೋಣ. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು.
ಸಭೆಯಲ್ಲಿ ನೀಡಲಾದ ಸಲಹೆ-ಸೂಚನೆಗಳ ಆಧಾರದ ಮೇಲೆ ಅರ್ಥಪೂರ್ಣವಾಗಿ ರಾಜ್ಯೋತ್ಸವ ಆಚರಿಸಲಾಗುವುದು ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಶೇ.84 ರಷ್ಟು ಲಸಿಕಾಕರಣ:

ಕಳೆದ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರಳ ರೀತಿಯಲ್ಲಿ ರಾಜ್ಯೋತ್ಸವ ಆಚರಿಸಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಶೇ.84 ರಷ್ಟು ಲಸಿಕಾಕರಣ ಆಗಿದ್ದು, ಕೋವಿಡ್ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಆದರೆ ಸಂಪೂರ್ಣವಾಗಿ ಹೋಗಿಲ್ಲ; ಸದ್ಯಕ್ಕೆ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಶೇ.0.3 ರಷ್ಟಿದೆ. ಎಲ್ಲರೂ ಕಡ್ಡಾಯವಾಗಿ ಕೋವಿಡ್ ನಿರೋಧಕ ಲಸಿಕೆ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಘಟನೆಗಳು ಜಾಗೃತಿ ಮಾಡಿಸಬೇಕು.
ಈ ಬಾರಿ ಕೋವಿಡ್ ಮಾರ್ಗಸೂಚಿ ಪಾಲಿಸುವುದರ ಜತೆಗೆ ಕರ್ನಾಟಕ ರಾಜ್ಯೋತ್ಸವ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ಹೇಳಿದರು.

ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್ ಮಾತನಾಡಿ, ರಾಜ್ಯೋತ್ಸವ ಮೆರವಣಿಗೆ ಶಾಂತಿಯುತವಾಗಿ ನಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆಯನ್ನು ನೀಡಿದರು.

ಅದ್ಧೂರಿ ರಾಜ್ಯೋತ್ಸವಕ್ಕೆ ಕನ್ನಡಪರ ಸಂಘಟನೆಗಳ ಅಗ್ರಹ:

ಸಭೆಯಲ್ಲಿ ಮಾತನಾಡಿದ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ, ಈ ಬಾರಿ ರಾಜ್ಯೋತ್ಸವ ಅದ್ಧೂರಿಯಾಗಿ ನಡೆಯಬೇಕು ಎಂದು ಹೇಳಿದರು. ಸರಕಾರದ ಎಲ್ಲ ಮಾರ್ಗಸೂಚಿ ‌ಪಾಲಿಸುವ ಮೂಲಕ ಸಂಭ್ರಮದ ರಾಜ್ಯೋತ್ಸವ ಆಚರಣೆಗೆ ಅವಕಾಶ ಕಲ್ಪಿಸಬೇಕು. ಕಿತ್ತೂರು ಉತ್ಸವ ಸಂದರ್ಭದಲ್ಲಿ ಮುಂಬಯಿ ಕರ್ನಾಟಕವನ್ನು “ಕಿತ್ತೂರು ಕರ್ನಾಟಕ” ಎಂದು ನಾಮಕರಣ ಮಾಡಲು ಸಭೆಯಲ್ಲಿ ಒಮ್ಮತದ ನಿರ್ಣಯ ತೆಗೆದುಕೊಳ್ಳಬೇಕು ಎಂದು ಚಂದರಗಿ‌ ಒತ್ತಾಯಿಸಿದರು.

ದೀಪಕ್ ಗುಡಗನಟ್ಟಿ ಮಾತನಾಡಿ, ಕನ್ನಡ ಭಾಷೆಯ ಅನುಷ್ಠಾನಕ್ಕೆ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಶ್ರೀನಿವಾಸ್ ತಾಳೂರಕರ ಮಾತನಾಡಿ, ಗೋಡೆಬರಹ, ಚಿತ್ರಗಳ ಮೂಲಕ ಬೆಳಗಾವಿ ನಗರ ಸೌಂದರ್ಯೀಕರಣ ಆಗಿದೆ. ಇದಕ್ಕೆ ಶ್ರಮಿಸಿದ ಪಾಲಿಕೆಯ ನಿಕಟಪೂರ್ವ ಆಯುಕ್ತ ಜಗದೀಶ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಅಲ್ಲದೇ,ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡ ನಾಡು-ನುಡಿ ರಕ್ಷಣೆಗೆ ಮುಂದಾಗಬೇಕು. ಸರಕಾರದ ಎಲ್ಲ ಕಚೇರಿಗಳ ಮೇಲೆ ಕನ್ನಡ ಧ್ವಜ ರಾರಾಜಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಾಧಕರಿಗೆ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಿ ಗೌರವಿಸಬೇಕು. ಈ ಬಾರಿಯ ವಿಜೃಂಭಣೆಯ ರಾಜ್ಯೋತ್ಸವ ಆಚರಣೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಶ್ರೀನಿವಾಸ್ ತಾಳೂರಕರ ಸಲಹೆ ನೀಡಿದರು.

ಕರಾಳ ದಿನಾಚರಣೆಗೆ ಅನುಮತಿ ಬೇಡ-ಮನವಿ:

ರಾಜ್ಯೋತ್ಸವ ಸಂದರ್ಭದಲ್ಲಿ ಎಂ.ಇ.ಎಸ್. ಕರಾಳ ದಿನಾಚರಣೆಗೆ ಜಿಲ್ಲಾಡಳಿತ ಅವಕಾಶ ನೀಡಬಾರದು ಎಂದು ಕನ್ನಡಪರ ಸಂಘಟನೆಗಳ ಮುಖಂಡರೊಬ್ಬರು ಮನವಿ ಮಾಡಿಕೊಂಡರು.

ಅನಂತ ಬ್ಯಾಕೂಡ್ ಮಾತನಾಡಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಬೇಕು. ಬೆಳಗಾವಿ ಕನ್ನಡ ರಾಜ್ಯೋತ್ಸವಕ್ಕೆ ಸರಕಾರ ವಿಶೇಷ ಅನುದಾನ ಒದಗಿಸಬೇಕು ಎಂದು ಒತ್ತಾಯಿಸಿದರು.

ರಾಣಿ ಚೆನ್ನಮ್ಮ ಪುತ್ಥಳಿಗೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಬೇಕು. ಪಾಲಿಕೆಯ ಪ್ರತಿ ವಾರ್ಡಿನಲ್ಲಿ ನವೆಂಬರ್ ಅಂತ್ಯದವರೆಗೆ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಸಲಹೆ ನೀಡಿದರು.

ಕನ್ನಡಪರ ಸಂಘಟನೆಗಳ ಮುಖಂಡ ಮಹಾದೇವ ತಳವಾರ ಮಾತನಾಡಿ, ಪಾಲಿಕೆಯ ನೂತನ ಸದಸ್ಯರು ಆಯಾ ವಾರ್ಡುಗಳಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆಗೆ ಚಾಲನೆ ನೀಡಬೇಕು ಎಂದು ಸಲಹೆ ನೀಡಿದರು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ರಾಜ್ಯೋತ್ಸವ ಆಚರಿಸಬೇಕು ಎಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ವತಿಯಿಂದ ಕಟ್ಟುನಿಟ್ಟಾಗಿ ಆದೇಶಿಸಬೇಕು ಎಂದು ಮನವಿ ಮಾಡಿಕೊಂಡರು. ಸ್ತಬ್ಧಚಿತ್ರಗಳ ಮೆರವಣಿಗೆಗೆ ವಾಹನಗಳನ್ನು ಒದಗಿಸಬೇಕು ಎಂದು ಜಿಲ್ಲಾಡಳಿತಕ್ಕೆ ಒತ್ತಾಯಿಸಿದರು.

ಕನ್ನಡಪರ ಹೋರಾಟಗಾರರು, ಪತ್ರಕರ್ತರನ್ನು ಸನ್ಮಾನಿಸಲು ಸಲಹೆ:

ಕನ್ನಡಪರ ಹೋರಾಟಗಾರ ಮೆಹಬೂಬ್ ಮಕಾನದಾರ ಮಾತನಾಡಿ, ಕನ್ನಡಪರ ಹೋರಾಟಗಾರರು ಹಾಗೂ ಪತ್ರಕರ್ತರಿಗೆ ಪ್ರತಿವರ್ಷದಂತೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಬೇಕು ಎಂದು ಒತ್ತಾಯಿಸಿದರು.

ಸಮಿತಿಗಳ ಮೂಲಕ ಅರ್ಹರನ್ನು ಗುರುತಿಸಿ ಪ್ರಶಸ್ತಿ ನೀಡುವ ಕ್ರಮವಾಗಬೇಕು ಎಂದು ಸಲಹೆ ನೀಡಿದರು. ರಾಜ್ಯೋತ್ಸವ ಮೆರವಣಿಗೆ ವೀಕ್ಷಿಸಲು ಆಗಮಿಸುವ ಮಹಿಳೆಯರಿಗೆ ಚೆನ್ನಮ್ಮ ವೃತ್ತದಲ್ಲಿ ಪ್ರತ್ಯೇಕವಾಗಿ ಗ್ಯಾಲರಿ ನಿರ್ಮಿಸಬೇಕು ಎಂದು ಮಕಾನದಾರ ಹೇಳಿದರು.

ರೂಪಕ ವಾಹನಗಳು ಹಾಗೂ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಅರವಿಂದ ದೇಶಪಾಂಡೆ ಒತ್ತಾಯಿಸಿದರು.

ಕಳೆದ ಒಂದೆರಡು ವರ್ಷಗಳ ಅವಧಿಯಲ್ಲಿ ಕನ್ನಡಪರ, ರೈತಪರ ಹಾಗೂ ದಲಿತಪರ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮೌನ ಆಚರಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಬೆಳಗಾವಿ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಮತ್ತಿತರರು ಉಪಸ್ಥಿತರಿದ್ದರು.
ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು, ಲಂಡನ್ ಕನ್ನಡಪರ ಸಂಘಟಕರಾದ ರಾಜು ಮೇತ್ರಿ ಸೇರಿದಂತೆ ನೂರಾರು ಜನರು ಸಭೆಯಲ್ಲಿ ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!